ರಾಜ್ಯದ್ಯಂತ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಕಾಲ ಆರೋಗ್ಯ ಸೇವೆ ಸ್ಥಗಿತಗೊಳಿಸಿದ ಹೋರಾಟ 20ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ 29ರಂದು ಮುಖ್ಯಮಂತ್ರಿಗಳ ಮನೆ ಮತ್ತು ವಿವಿಧ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹೀಗೆ ವಿವಿಧ ಹಂತಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪರವಾಗಿ ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಅವರು ತಿಳಿಸಿದರು. ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಆಶಾ ಕಾರ್ಯಕರ್ತೆಯರು ಕೆಲಸ ಸ್ಥಗಿತಗೊಳಿಸಿ 16 ದಿನಗಳು ಕಳೆದರು ಸಮಸ್ಯೆ ಬಗೆಹರಿಸುವ ದಿಸೆಯಲ್ಲಿ ಮಾತುಕತೆಗೆ ಮುಂದಾಗದಿರುವ ರಾಜ್ಯ ಸರ್ಕಾರದ ದುಡಿಯುವ ಜನರ ವಿರೋಧಿ ಧೋರಣೆಯನ್ನು ವಿರೋಧಿಸಿ 29ರಂದು ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದ ಅವರು ಸಮಸ್ಯೆಗಳನ್ನು ಪರಿಹರಿಸಲು ಸಂಘದೊಂದಿಗೆ ಕೂಡಲೇ ಮಾತುಕತೆ ನಡೆಸಬೇಕೆಂದು ಸರ್ಕಾರವನ್ನು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.