ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ- ಶಾಸಕ ರಾಮದಾಸ್

Share

 

ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ದುರ್ದೈವದ ಸಂಗತಿ : ರಾಮದಾಸ್ ವಿಷಾದ

ಮೈಸೂರು:
ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೨-೩ ತಿಂಗಳಿಂದ ಕೆಲವರು ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದ ವ್ಯಕ್ತಪಡಿಸಿದರು.
ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ 59ರಲ್ಲಿ ಸೋಮವಾರ ಆಯೋಜಿಸಲಾಗಿದ್ದ ಯೋಗಕ್ಷೇಮಯಾತ್ರೆ ವೇಳೆ ಅವರು ಮಾತನಾಡಿದರು.
ಭಾರತೀಯ ಜನತಾ ಪಕ್ಷ ಅಭಿವೃದ್ಧಿಯ ಮಂತ್ರ ಪಠಿಸುತ್ತದೆಯೇ ಹೊರತು, ಅನ್ಯ ವಿಚಾರಗಳತ್ತ ಗಮನ ಹರಿಸುವುದಿಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಸಾಬೀತು ಮಾಡಿದ್ದಾರೆ. ಆ ದಿಕ್ಕಿನಲ್ಲಿ‌ ನಮ್ಮೆಲ್ಲರ ಚಿತ್ತ ಇರಬೇಕು ಎಂದು ಸೂಚ್ಯವಾಗಿ ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಇಂದು ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ.‌ ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಾಹಿತಿ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುಂಬಿದ ಸಮಾವೇಶದಲ್ಲಿ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ. ಈ ಎಲ್ಲಾ ಫಲ‌ ಕ್ಷೇತ್ರದ ಜನರಿಗೆ ಸಲ್ಲಲಿದೆ ಎಂದ ಅವರು ಯಾರೋ ಕೆಲವರ ಮಾತಿಗೆ ಮನ್ನಣೆ ನೀಡುವ ಅಗತ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಏಪ್ರಿಲ್ ತಿಂಗಳಲ್ಲಿ ನಾನು ಹಾಗೂ ನಮ್ಮ ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ಬರಲಿದ್ದೇವೆ, ನಿಮ್ಮ ಆಶೀರ್ವಾದ ನನಗೆ ಬೇಕಿದೆ. ಭ್ರಷ್ಟಾಚಾರ ರಹಿತ ಕ್ಷೇತ್ರ ಮಾಡುವ ಸಲುವಾಗಿ ದೇವರ ಮುಂದಿಟ್ಟ ಹತ್ತು ರೂ. ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಕಳೆದ ಸಾಲಿನಲ್ಲಿ ಸರ್ಕಾರ ರಚನೆ ವೇಳೆ ಸಂಖ್ಯೆಯ ಕೊರತೆ ಉಂಟಾಯಿತು. ಆದರೆ, ಈ ಬಾರಿ ಹಾಗಾಗದಂತೆ ಎಚ್ಚರ ವಹಿಸಬೇಕಿದೆ. ಕನಿಷ್ಠ ೧೫೦ ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆಲ್ಲಲೇಬೇಕಿದೆ. ಈ ಮೂಲಕ ಸಂಘಟನಾತ್ಮಕ ಹೋರಾಟ ಮಾಡಬೇಕಿದೆ ಎಂದು ಹೇಳಿದರು.
ಕ್ಷೇತ್ರ ವ್ಯಾಪ್ತಿಯ ೪೮೨ ಕಿಮೀ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಶೇ.೮೦ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಮಾತ್ರವಲ್ಲ ಮುಂದಿನ ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಾರದ ರೀತಿಯಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದರು.
ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ನಡೆಯುತ್ತಿರುವ ಐದನೇ ಯೋಗಕ್ಷೇಮ ಯಾತ್ರೆ ಇದಾಗಿದೆ. ಜನರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಬೋರ್ವೆಲ್ ಮುಕ್ತ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇವೆ. ಮಳೆಗಾಲದಲ್ಲಿ ವಾರ್ಡಿನ‌ ಹಲವೆಡೆ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದೀಗ ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಹತ್ತು ಹಲವು ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಮೇಯರ್ ಸುನಂದಾ ಪಾಲನೇತ್ರ ಮತ್ತಿತರರು ಉಪಸ್ಥಿತರಿದ್ದರು.


Share