ವೈದ್ಯ ಅಧಿಕಾರಿಗಳಿಗೆ ನೋಟಿಸ್ ಜಾರಿ

ಕರ್ತವ್ಯ ಲೋಪ : ಮೂವರು ವೈದ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್

 ಚಾಮರಾಜನಗರ, ಜುಲೈ 03 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಗಂಟಲು ದ್ರವ ಮಾದರಿ ಸಂಗ್ರಹಣೆಗೆ ನಿಗದಿಪಡಿಸಲಾದ ಗುರಿಯನ್ನು ಸಾಧಿಸದೇ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂವರು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

 ಗುಂಡ್ಲುಪೇಟೆ ತಾಲೂಕಿನ ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಸ್ವಾಮಿ, ಕಬ್ಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವೆಂಕಟಸ್ವಾಮಿ ಹಾಗೂ ಸಂತೇಮರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೇವರಾಜು ಅವರಿಗೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

 ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ಈಗಾಗಲೇ ಹಲವು ಬಾರಿ ನಿರ್ದೇಶನ ಹಾಗೂ ತರಬೇತಿ ನೀಡಲಾಗಿದೆ. ಪ್ರತಿದಿನ ತಾಲೂಕು ಹಂತದಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಣೆಗೆ ಗುರಿ ನಿಗದಿಪಡಿಸಲಾಗಿದೆ. ಆದರೆ ಜುಲೈ 2ರಂದು ತಮ್ಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಾವುದೇ ವ್ಯಕ್ತಿಯ ಗಂಟಲು ದ್ರವ ಮಾದರಿ ಸಂಗ್ರಹಣೆ ಮಾಡದೇ ಶೂನ್ಯ ಪ್ರಗತಿ ಸಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅತ್ಯಂತ ಮಹತ್ತರವಾದ ಕೋವಿಡ್-19ರ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯತನ ತೋರಿರುವುದರಿಂದ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಏಕೆ ಶಿಸ್ತಿನ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ನೋಟಿಸ್ ತಲುಪಿದ 24 ಗಂಟೆಯಲ್ಲಿ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ನೋಟಿಸಿನಲ್ಲಿ ತಿಳಿಸಲಾಗಿದೆ.