ಸರ್ವ ಪಕ್ಷ ಸಭೆ-ಸಿಎಂ ಹೇಳಿದ್ದು ಏನು

Share

*ಸರ್ವ ಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಸಂಗತಿಗಳು*

* ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಲಾಯಿತು.

* ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಬರಲು ಸಾಧ್ಯವಾಗಿಲ್ಲ.

* ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ.
99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ.
ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು. ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಮಾತ್ರ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.
ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ.

* ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ, ನಂತರ ಐದು ಸಾವಿರ ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದೆ.
ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಯಿತು.

* ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ಕರೆಯಲಾಯಿತು.

* ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.

* ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.

* 18 ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು.
ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ.

 


Share