ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ

213
Share

 

*ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ*

*ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು. ಬರುತ್ತವೆ: ಸಿ.ಎಂ.ವಿಶ್ವಾಸ*

*ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ: ಸಿ.ಎಂ.ಅಸಮಾಧಾನ*

*ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಯಪ್ಪಾ ಯಪ್ಪಾ ಮೋದಿಯವರಷ್ಟು, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ*

ಮೈಸೂರು ಮಾ 24: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತವಾಗಿ ನುಡಿದರು.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು. ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.

ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು‌ ವಿಶ್ವಾಸದಿಂದ ನುಡಿದರು.

ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದೆ ಎಂದರು.‌

ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.

ಹೀಗಾಗಿ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ , ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.

ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ ಎಂದರು.

ಶ್ರೀರಾಮಚಂದ್ರ, ಸೀತಾ , ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು‌. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ನರೇಂದ್ರ ಮೋದಿ ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ ಎಂದು ಅವರ ವಿಫಲ ಅಶ್ವಾಸನೆಗಳ ಪಟ್ಟಿಯನ್ನೇ ನೀಡಿದರು.

*ಸೆಕ್ಯುಲರ್ ಏನಾಯ್ತು?*

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ.

ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಲಹೆ ನೀಡಿದರು.

*ನಮ್ಮ ಪಾಲು ಕೇಳೋಕೆ ಸುಪ್ರೀಂಕೋರ್ಟ್ ಗೆ ಹೋಗಬೇಕಾಯ್ತು*

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ.

ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

*ಬಾಕ್ಸ್*

*ಮೋದಿ ಆಶ್ವಾಸನೆಗಳ ಗತಿ ಏನಾಯ್ತು?*
*ಮುಖ್ಯಮಂತ್ರಿಗಳು ಮೈಸೂರು ಶೈಲಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಚಪ್ಪಾಳೆ ತಟ್ಟಿ ಸಂಭ್ರಮಿಸಿದ ಕಾರ್ಯಕರ್ತರು*

*ಮೋದಿಯವರು ವಿದೇಶದಿಂದ ಕಪ್ಪು ಹಣ ತರ್ತೀವಿ ಅಂದ್ರು- ತಂದ್ರಾ?

*ಎಲ್ಲರ ಅಕೌಂಟಿಗೆ 15 ಲಕ್ಷ ಹಾಕ್ತೀವಿ ಅಂದ್ರು. ಹಾಕಿದ್ರಾ?

*ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು. ಮಾಡಿದ್ರಾ?

*ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ್ರು, ದುಪ್ಪಟ್ಟಾಯ್ತಾ?

*ಅಚ್ಛೇ ದಿನ್ ಆಯೆಗಾ ಅಂದ್ರು, ಬಂತಾ ಅಚ್ಛೆ ದಿನ್?

*ಭಾರತದ ಸಾಲವನ್ನೆಲ್ಲಾ ತೀರಿಸ್ತೀವಿ ಅಂದ್ರು. ಮೋದಿ ಪ್ರಧಾನಿಯಾದಾಗ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ಈಗ ದೇಶದ ಸಾಲ 183 ಲಕ್ಷ ಕೋಟಿಗೆ ಏರಿಕೆ ಆಗಿದೆ. 10 ವರ್ಷದಲ್ಲಿ ಮೋದಿ ಸರ್ಕಾರ ಮಾಡಿದ ಸಾಲ 130 ಲಕ್ಷ ಕೋಟಿ. ಇದೇನಾ ಇವರು ಸಾಲ ತೀರಿಸಿದ್ದು?

*ಮೇಕ್ ಇನ್ ಇಂಡಿಯಾ ಅಂದ್ರು, ಆಯ್ತಾ?

*ರೂಪಾಯಿ ಎದುರು ಡಾಲರ್ ಬೆಲೆ ಇಳಿಯತ್ತೆ ಅಂದ್ರು, ಇಳೀತಾ ? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು
*ನರೇಂದ್ರ ಮೋದಿಯವರು ಒಳ್ಳೆ ಈವೆಂಟ್ ಮ್ಯಾನೇಜರ್ ಅಷ್ಟೆ* ಎಂದರು.

ಹೀಗೆ ಬಿಜೆಪಿ ನೀಡಿದ ಆಶ್ವಾಸನೆಗಳ ಉದ್ದುದ್ಧದ ಪಟ್ಟಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಾಮೂಲು ಮೈಸೂರು ಶೈಲಿಯಲ್ಲಿ ಪ್ರಶ್ನಿಸಿದರು.


Share